
ಕೊಪ್ಪಳ: ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದಿದ್ದು, ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಭೀಕರ ಅಪಘಾತ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ.
ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಭದ್ರಾ ಸೇತುವೆ ಮೇಲೆ ಈ ದುರಂತ ಸಂಭವಿಸಿದೆ. ಮೃತರನ್ನು ಕೆಂಚಪ್ಪ (35), ಮಹಾಂತೇಶ್ (18), ಭರತ್ (1), ಸವಿತಾ (12), ಮಾರೇಶ್ ಹಾಗೂ ಗೌರಮ್ಮ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎನ್ನಲಾಗಿದೆ.
ಹುಲಿಗೆಮ್ಮ ಜಾತ್ರೆಗೆ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದಿದೆ. ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೊಸಪೇಟೆ ಹಾಗೂ ಕೊಪ್ಪಳ ಜಿಲ್ಲಾಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
