Saturday, May 30

ಜೂನ್ 3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ; ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಜೂನ್ 3 ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆಶಿ ಜೊತೆಗೆ ಸಚಿವ ಸಂಪುಟದ ಸದಸ್ಯರೂ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ವಿಧಾನಸೌಧದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಏಕಮತದಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು.

ಇದಾದ ಬಳಿಕ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಹಿರಿಯ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ, ಸರ್ಕಾರ ರಚನೆಗೆ ರಾಜ್ಯಪಾಲರ ಮುಂದೆ ಹಕ್ಕು ಮಂಡಿಸಿದರು. ಬಹುಮತದ ಬೆಂಬಲದ ಆಧಾರದ ಮೇಲೆ ರಾಜ್ಯಪಾಲರು ಸರ್ಕಾರ ರಚಿಸಲು ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ.

ಈ ಸಂಬಂಧ ರಾಜ್ಯಪಾಲರ ಕಚೇರಿಯಿಂದ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತ ಪತ್ರ ಕಳುಹಿಸಲಾಗಿದ್ದು, ಜೂನ್ 3ರಂದು ಸಂಜೆ 4.05 ಗಂಟೆಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವಂತೆ ಆಹ್ವಾನಿಸಲಾಗಿದೆ.

ರಾಜ್ಯಪಾಲರ ಪತ್ರದ ಪ್ರಕಾರ, ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಚಿವ ಸಂಪುಟದ ಸದಸ್ಯರೊಂದಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಮೂಲಕ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರದ ಗದ್ದುಗೆ ಏರಲಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ.

ಈ ಕುರಿತಂತೆ ಎಐಸಿಸಿ ನಾಯಕ ಕೆ.ಸಿ.ವೇಣುಗೋಪಾಲ್ ಮಾಹಿತಿ ಹಂಚಿಕೊಂಡಿದ್ದಾರೆ. ಸಿಎಲ್‌ಪಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕರಾಗಿ ಆಯ್ಕೆ ಮಾಡಲಾಗಿದೆ, ಮತ್ತು ಜೂನ್ 3 ರಂದು ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಮ್ಮ ಹೈಕಮಾಂಡ್ ನಾಯಕರ ಮಾರ್ಗದರ್ಶನದಲ್ಲಿ ಈ ಅಧಿಕಾರ ಹಸ್ತಾಂತರ ನಿರ್ಧಾರ ಸರಾಗವಾಗಿ ನಡೆದಿದೆ ಎಂದವರು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ತೊಂದರೆಗಳನ್ನು ಎದುರಿಸುತ್ತದೆ ಎಂಬ ಅನೇಕ ಜನರ ನಿರೀಕ್ಷೆ ಸುಳ್ಳಾಗಿದೆ ಮತ್ತು ಕಾಂಗ್ರೆಸ್ ಒಂದು ಕುಟುಂಬ ಎಂದು ಸಾಬೀತಾಗಿದೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಸಿದ್ದರಾಮಯ್ಯ ತಮ್ಮ ಕಾರ್ಯಗಳ ಮೂಲಕ ಸಾಬೀತುಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ಬೆಂಬಲದೊಂದಿಗೆ, ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ, 2028 ರಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಕೆ.ಸಿ.ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.