Saturday, May 30

ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ ಸಂಪುಟ ಪುನರಚನೆ ವೇಳೆ ವೀರಶೈವ-ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಯುವ ಘಟಕ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ವೆಂಕಟರೆಡ್ಡಿ ಡಿ. ಪಾಟೀಲ್, ಹಿಂದಿನ ಸಚಿವ ಸಂಪುಟದಲ್ಲಿ ಸಮುದಾಯದ ಏಳು ಸಚಿವರು ರಾಜ್ಯದ ಅಭಿವೃದ್ಧಿ, ಪರಿಸರ ಸಂರಕ್ಷಣೆ, ದುರ್ಬಲ ವರ್ಗಗಳ ಸಬಲೀಕರಣ ಹಾಗೂ ಆರ್ಥಿಕ ಬೆಳವಣಿಗೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ರಾಜ್ಯದ ಅತಿದೊಡ್ಡ ಸಮುದಾಯಗಳಲ್ಲಿ ಒಂದಾದ ವೀರಶೈವ-ಲಿಂಗಾಯತ ಸಮುದಾಯವು ಕಾಂಗ್ರೆಸ್ ಸರ್ಕಾರ ರಚನೆಗೆ ಮಹತ್ವದ ಬೆಂಬಲ ನೀಡಿದ್ದು, ಹೊಸ ಸಚಿವ ಸಂಪುಟದಲ್ಲಿ ಕನಿಷ್ಠ ಎಂಟು ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಅವರು ಆಗ್ರಹಿಸಿದರು.

ಉಪಮುಖ್ಯಮಂತ್ರಿ ಹುದ್ದೆಯನ್ನು ಸಮುದಾಯದ ಯಾರಿಗಾದರೂ ನೀಡಿದರೆ ಸ್ವಾಗತಿಸುವುದಾಗಿ ತಿಳಿಸಿದ ಅವರು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ಈಶ್ವರ್ ಖಂಡ್ರೆ ಅವರಿಗೆ ಡಿಸಿಎಂ ಸ್ಥಾನ ನೀಡಿದರೆ ಸಮುದಾಯಕ್ಕೆ ಹೆಚ್ಚಿನ ಸಂತೋಷವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ, ಸಮುದಾಯದ ಪ್ರತಿನಿಧಿಗೆ ವಿಧಾನ ಪರಿಷತ್ ಸದಸ್ಯತ್ವ ಹಾಗೂ ಒಬ್ಬರಿಗೆ ರಾಜ್ಯಸಭಾ ಸದಸ್ಯ ಸ್ಥಾನ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ್ತಷ್ಟು ಬಲ ಸಿಗಲಿದೆ ಎಂದು ಹೇಳಿದ ಅವರು, ಮಹಾಸಭೆಯ ರಾಷ್ಟ್ರೀಯ ಯುವ ಘಟಕವು ಕಾಂಗ್ರೆಸ್‌ಗೆ ಮುಂದೆಯೂ ಬೆಂಬಲ ನೀಡಲಿದೆ ಎಂದು ತಿಳಿಸಿದರು.