Saturday, July 18

ಅಹಮದಾಬಾದ್ ಪಟಾಕಿ ಘಟಕ ಸ್ಫೋಟ: ಮೃತರ ಸಂಖ್ಯೆ 9ಕ್ಕೆ ಏರಿಕೆ

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನ ರಾಮೋಲ್ ಪ್ರದೇಶದಲ್ಲಿದ್ದ ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟ ಹಾಗೂ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿದೆ. ಹಲವರು ತೀವ್ರ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೆಹಮೂದ್‌ಪುರದ ರಾಮೋಲ್-ಗಟ್ರಾಡ್ ರಸ್ತೆಯಲ್ಲಿರುವ ಶೆಡ್‌ನಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದ ಪ್ರಬಲ ಸ್ಫೋಟದ ಬಳಿಕ ಬೆಂಕಿ ಕಾಣಿಸಿಕೊಂಡು ಹಲವು ಮಂದಿ ಅವಶೇಷಗಳಡಿ ಸಿಲುಕಿದ್ದರು. ರಕ್ಷಣಾ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ತಕ್ಷಣ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿತು.

ಎಲ್.ಜಿ. ಆಸ್ಪತ್ರೆಯಲ್ಲಿ ದಾಖಲಾದ ಒಂಬತ್ತು ಮಂದಿಯಲ್ಲಿ ನಾಲ್ವರು ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟರೆ, ಬಳಿಕ ಇನ್ನೂ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ಅಸರ್ವಾ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ ಒಂಬತ್ತಕ್ಕೇರಿದೆ. ಉಳಿದ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.

ಸ್ಫೋಟದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಕ್ರಮ ಪಟಾಕಿ ತಯಾರಿಕಾ ಘಟಕದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಘಟನೆಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50,000 ಪರಿಹಾರ ಪ್ರಕಟಿಸಿದ್ದಾರೆ.