Sunday, September 27

ಉತ್ತರ ಪ್ರದೇಶದಲ್ಲಿ ಭಾರಿ ಮಳೆ: 15 ಮಂದಿ ಸಾವು, 100ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಲಖನೌ: ಉತ್ತರ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ಗೋಡೆ ಕುಸಿತ ಮತ್ತು ಮಿಂಚಿನ ಹೊಡೆತಕ್ಕೆ ಸಿಲುಕಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ. 100ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ 75 ಜಿಲ್ಲೆಗಳ ಪೈಕಿ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ರಾಜಧಾನಿ ಲಖನೌನಲ್ಲಿ ಒಂದೇ ದಿನ 125.8 ಮಿ.ಮೀ ಮಳೆ ದಾಖಲಾಗಿದ್ದು, ಹಲವು ರಸ್ತೆಗಳು ಜಲಾವೃತಗೊಂಡಿವೆ. ಕಾನ್ಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಮುಂದುವರಿದಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಈಶಾನ್ಯ ಮಧ್ಯಪ್ರದೇಶ ಮತ್ತು ಉತ್ತರ ಛತ್ತೀಸ್‌ಗಢ ಭಾಗದಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತ ರಾಜ್ಯದಲ್ಲಿ ಭಾರಿ ಮಳೆಗೆ ಕಾರಣವಾಗಿದೆ.

ಭಾನುವಾರವೂ ಉತ್ತರ ಪ್ರದೇಶದ ಮಧ್ಯಭಾಗ ಹಾಗೂ ಟೆರೈ ತಪ್ಪಲು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ನದಿ ಪಾತ್ರಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ಹಠಾತ್ ಪ್ರವಾಹದ ಅಪಾಯ ಇರುವುದಾಗಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತುರ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ಅಗತ್ಯವಿರುವ ಪ್ರದೇಶಗಳಲ್ಲಿ ನಿಯೋಜಿಸಲಾಗಿದ್ದು, ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಜಿಲ್ಲಾಡಳಿತಗಳು ಪರಿಸ್ಥಿತಿಯ ಮೇಲೆ ನಿಗಾ ವಹಿಸಿವೆ.