
ಬೆಂಗಳೂರು: ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಯವರು ಸಲ್ಲಿಸಿದ್ದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.
ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಡಿಸೆಂಬರ್ 17, 2025 ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ತಾಂತ್ರಿಕ ಕಾರಣಗಳಿಂದ ರಾಜ್ಯದ ಸುಮಾರು 30,000ಕ್ಕೂ ಹೆಚ್ಚು ಅರ್ಹ ರೈತರು ಯೋಜನೆಯ ಲಾಭದಿಂದ ವಂಚಿತರಾಗುತ್ತಿರುವುದನ್ನು ಗಮನಕ್ಕೆ ತಂದಿದ್ದರು. ಕಳೆದ ವಾರ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಕೇಂದ್ರ ಸಚಿವರು ಆಗಮಿಸಿದ್ದ ಸಂದರ್ಭದಲ್ಲಿಯೂ ಈ ವಿಚಾರವನ್ನು ಪ್ರಸ್ತಾಪಿಸಿ, ಮನವಿ ಮಾಡಿದ್ದರು. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯ ಸರ್ಕಾರ ನೀಡಿರುವ ದೃಢೀಕರಣದ ಆಧಾರದ ಮೇಲೆ ಈಗಾಗಲೇ 22,000ಕ್ಕೂ ಹೆಚ್ಚು ಫಲಾನುಭವಿಗಳನ್ನು 22ನೇ ಕಂತಿನ ಪಾವತಿ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಶೀಘ್ರದಲ್ಲೇ ಅವರಿಗೆ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಉಳಿದ ಪ್ರಕರಣಗಳನ್ನು ರಾಜ್ಯ ಅಧಿಕಾರಿಗಳು ಪರಿಶೀಲಿಸಿ ದೃಢೀಕರಿಸಿದ ಕೂಡಲೇ ಅವರನ್ನೂ ಯೋಜನೆಯಡಿ ಸೇರಿಸಿಕೊಳ್ಳಲಾಗುವುದು ಎಂದು ಚೌಹಾಣ್ ಅವರು ತಮ್ಮ ಪತ್ರದಲ್ಲಿ ಭರವಸೆ ನೀಡಿದ್ದಾರೆ.
ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಸಚಿವ ಎನ್. ಚಲುವರಾಯಸ್ವಾಮಿ ಅವರು, “ರಾಜ್ಯದ ರೈತರ ಹಿತದೃಷ್ಟಿಯಿಂದ ನಾವು ಸಲ್ಲಿಸಿದ ಮನವಿಯನ್ನು ಪುರಸ್ಕರಿಸಿ, ತಾಂತ್ರಿಕ ಅಡೆತಡೆಗಳನ್ನು ನಿವಾರಿಸಿ ರೈತರಿಗೆ ನ್ಯಾಯ ಒದಗಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರಾಜ್ಯ ಸರ್ಕಾರದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ,” ಎಂದು ತಿಳಿಸಿದ್ದಾರೆ. ಕೇಂದ್ರದ ಈ ಕ್ರಮದಿಂದಾಗಿ ಅರ್ಹ ರೈತರಿಗೆ ಸಮಯಕ್ಕೆ ಸರಿಯಾಗಿ ಆರ್ಥಿಕ ನೆರವು ಸಿಗುವಂತಾಗಿದ್ದು, ಬಾಕಿ ಇರುವ ಇತರ ರೈತರ ದಾಖಲೆಗಳ ಪರಿಶೀಲನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.
