
ಧಾರವಾಡ: ಬೇಸಿಗೆಯ ತೀವ್ರ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಅಪ್ರಾಪ್ತ ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಸಮೀಪದ ಕೆರೆಯಲ್ಲಿ ನಡೆದಿದೆ.
ಮೃತರನ್ನು ಸಿಂಗನಹಳ್ಳಿ ಗ್ರಾಮದ ಅಬ್ಬಾಸ್ ವಟ್ನಾಳ್ (12), ಅಸ್ಲಂ ವಟ್ನಾಳ್ (10) ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ (10) ಎಂದು ಗುರುತಿಸಲಾಗಿದೆ. ಅಬ್ಬಾಸ್ ಮತ್ತು ಅಸ್ಲಂ ಸಹೋದರರಾಗಿದ್ದಾರೆ.
ಕಡು ಬಿಸಿಲಿನ ಹಿನ್ನೆಲೆಯಲ್ಲಿ ಮೂವರು ಬಾಲಕರು ಕೆರೆಗೆ ಈಜಲು ತೆರಳಿದ್ದು, ಈ ವೇಳೆ ಆಳವಾದ ನೀರಿನಲ್ಲಿ ಸಿಲುಕಿ ಮುಳುಗಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಮೂವರ ಮೃತದೇಹಗಳನ್ನು ಹೊರತೆಗೆದರು.
ಘಟನೆಯ ಸುದ್ದಿ ತಿಳಿದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
