Wednesday, August 12

ಸಚಿವ ಡಿ.ಸುಧಾಕರ್ ನಿಧನಕ್ಕೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಕರ್ನಾಟಕದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ.

ರಾಹುಲ್ ಗಾಂಧಿ ತಮ್ಮ ಸಂತಾಪ ಸಂದೇಶದಲ್ಲಿ, “ಕಾಂಗ್ರೆಸ್ ಸಿದ್ಧಾಂತದ ದೀವಾಳಿ ಹರಿಕಾರರಾಗಿದ್ದ ಡಿ. ಸುಧಾಕರ್ ಅವರ ಜೀವನ ಚಿತ್ರದುರ್ಗ ಮತ್ತು ಕರ್ನಾಟಕದ ಬಡವರ ಸೇವೆಯಲ್ಲಿ ಕಳೆದಿದೆ” ಎಂದು ಹೇಳಿದ್ದಾರೆ. ಅವರ ನಿಧನವು ಪಕ್ಷಕ್ಕೆ ಮತ್ತು ಸಾರ್ವಜನಿಕ ಬದುಕಿಗೆ ದೊಡ್ಡ ನಷ್ಟವಾಗಿದೆ ಎಂದೂ ತಿಳಿಸಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ X ಖಾತೆಯಲ್ಲಿ ಭಾವುಕ ಸಂದೇಶ ಹಂಚಿಕೊಂಡಿದ್ದಾರೆ. “ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ. ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ. ಈ ವೇಳೆ ಅವರು ಗುಣಮುಖರಾಗುವ ಭರವಸೆ ನನ್ನಲ್ಲಿ ಮೂಡಿತ್ತು” ಎಂದು ಸಿಎಂ ತಿಳಿಸಿದ್ದಾರೆ.

“ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸುಧಾಕರ್. ಇಂಥವರು ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ವೈದ್ಯರ ನಿರಂತರ ಪ್ರಯತ್ನ ಹಾಗೂ ನಮ್ಮೆಲ್ಲರ ಹಾರೈಕೆಯ ಹೊರತಾಗಿಯೂ ಇಂದು ಅವರು ನಮ್ಮನ್ನಗಲಿದ್ದಾರೆ. ಇದು ಅತ್ಯಂತ ನೋವಿನ ಗಳಿಗೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.