Monday, June 8

ಸೂರಜ್ ಹೆಗ್ಡೆ ನಿಧನಕ್ಕೆ ಸಚಿವ ಶರಣಪ್ರಕಾಶ್ ಪಾಟೀಲ್ ಸಂತಾಪ

ಬೆಂಗಳೂರು: ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರ ಹಠಾತ್ ನಿಧನಕ್ಕೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಸೂರಜ್ ಹೆಗ್ಡೆ ಅವರ ನಿಧನದ ಸುದ್ದಿ ಆಘಾತ ಉಂಟುಮಾಡಿದೆ ಎಂದು ಹೇಳಿದ್ದಾರೆ. ಅತಿ ಚಿಕ್ಕ ವಯಸ್ಸಿನಲ್ಲಿಯೇ ಅವರು ಅಗಲಿರುವುದು ಅತ್ಯಂತ ದುಃಖಕರ ಸಂಗತಿ ಎಂದು ಕಂಬನಿ ಮಿಡಿದಿದ್ದಾರೆ.

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಮೊಮ್ಮಗನಾದ ಸೂರಜ್ ಹೆಗ್ಡೆ, ತಮ್ಮ ತಾತನ ಹೆಜ್ಜೆ ಗುರುತುಗಳನ್ನು ಅನುಸರಿಸಿ ರಾಜಕೀಯ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸುತ್ತಿದ್ದರು ಎಂದು ಸಚಿವರು ಸ್ಮರಿಸಿದ್ದಾರೆ.

ಎಐಸಿಸಿ ಕಾರ್ಯದರ್ಶಿಯಾಗಿ ಹಾಗೂ ತಮಿಳುನಾಡು–ಪುದುಚೇರಿ ಕಾಂಗ್ರೆಸ್ ಉಸ್ತುವಾರಿಯಾಗಿ ಸೂರಜ್ ಹೆಗ್ಡೆ ಸಂಘಟನೆಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಪಕ್ಷದ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿದ್ದ ಅವರು ಸಮರ್ಥ ಸಂಘಟಕರಾಗಿ ಗುರುತಿಸಿಕೊಂಡಿದ್ದರು ಎಂದು ಸಚಿವರು ಹೇಳಿದ್ದಾರೆ.

“ಸೂರಜ್ ಹೆಗ್ಡೆ ಅವರ ನಿಧನದಿಂದ ಕಾಂಗ್ರೆಸ್ ಪಕ್ಷ ಒಬ್ಬ ಸಮರ್ಥ, ಕ್ರಿಯಾಶೀಲ ಮತ್ತು ಭರವಸೆಯ ಕಾರ್ಯಕರ್ತನನ್ನು ಕಳೆದುಕೊಂಡಿದೆ” ಎಂದು ಡಾ. ಶರಣಪ್ರಕಾಶ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಸೂರಜ್ ಹೆಗ್ಡೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಸದಸ್ಯರು, ಸ್ನೇಹಿತರು, ಅಭಿಮಾನಿಗಳು ಮತ್ತು ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಚಿವರು ತಮ್ಮ ಸಂತಾಪ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.