ಮುಡಾ ಹಗರಣ; ಇದೀಗ ರಾಜಭವನ-ಸರ್ಕಾರ ನಡುವೆ ಸಂಘರ್ಷ; ರಾಜ್ಯಪಾಲರ ಶೋಕಾಸ್ ನೊಟೀಸ್ ಹಿಂಪಡೆಯುವಂತೆ ಒತ್ತಾಯಿಸಲು ಸಂಪುಟ ತೀರ್ಮಾನ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವ ಮುಡಾ ಹಗರಣ ವಿಚಾರದಲ್ಲಿ ಈವರೆಗೂ ಕಾಂಗ್ರೆಸ್-ಬಿಜೆಪಿ ನಡುವೆ ನಡೆಯುತ್ತಿದ್ದ ಸಂಘರ್ಷ ಇದೀಗ ರಾಜಭವನ-ಸರ್ಕಾರ ನಡುವಿನ ಕಲಹದತ್ತ ತಿರುಗಿದಂತಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣ ಕುರಿತಂತೆ ಪ್ರಾಸಿಕ್ಯೂಷನ್ ಅನುಮತಿ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಹಿನ್ನೆಲೆ ರಾಜ್ಯಪಾಲರು ಸಿಎಂಗೆ ನೀಡಿರುವ ನೊಟೀಸ್ ಇದೀಗ ವಿದ್ಯಮಾನಗಳ ಕೇಂದ್ರಬಿಂದುವಾಗಿದ್ದು, ಈ ವಿಚಾರದಲ್ಲಿ ಇಂದು (ಆ.1) ನಡೆದ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರವೊಂದು ರಾಜಭವನ ಮತ್ತು ಸರ್ಕಾರದ ನಡುವಿನ ಸಂಘರ್ಷಕ್ಕೆ ಹಾದಿ ಮಾಡಿಕೊಟ್ಟಂತಿದೆ.

ಅಷ್ಟಕ್ಕೂ ಸಂಪುಟದ ತೀರ್ಮಾನ ಏನು..?

ರಾಜ್ಯಪಾಲರು ನೀಡಿರುವ ನೊಟೀಸ್ ಸಿದ್ದರಾಮಯ್ಯ ಅವರನ್ನು ಆತಂಕಕ್ಕೀಡು ಮಾಡಿದರೆ, ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೂ ಮುಜುಗರದ ಪರಿಸ್ಥಿತಿಯನ್ನು ತಂದೊಡ್ಡಿದೆ. ಇಂದು ವೇಳೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದೇ ಆದಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡುವ ಪರಿಸ್ಥಿತಿಯೂ ಎದುರಾಗಬಹುದು. ಈ ಹಿನ್ನೆಲೆಯಲ್ಲಿ ಜಾಣ ನಡೆ ಅನುಸರಿಸಿರುವ ಸಿದ್ದರಾಮಯ್ಯ ಇಂದಿನ ಸಂಪುಟ ಸಭೆಯ ನಿರ್ಧಾರವನ್ನು ಉಪಮುಖ್ಯಮಂತ್ರಿ ಡಿ.ಕೆ‌.ಶಿವಕಮಾರ್ ಅವರಿಗೆ ಬಿಟ್ಟುಕೊಟ್ಟರು.

ಡಿ.ಕೆ.ಶಿ.ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಎರಡು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪ್ರಾಸಿಕ್ಯೂಷನ್ ಅನುಮತಿ ಸಂಬಂಧ ರಾಜ್ಯಪಾಲರು ನೀಡಿರುವ ನೊಟೀಸ್​ ಹಿಂಪಡೆಯುವಂತೆ ಒತ್ತಾಯಿಸುವ ಹಾಗೂ ಈ ಬಗ್ಗೆ ಕಾನೂನು ಹೋರಾಟ ನಡೆಸಲು ಸಂಪುಟ ನಿರ್ಣಯ ಕೈಗೊಂಡಿತು.

ಮೊಟ್ಟೆ ಹಗರಣಕ್ಕೆ ಸಂಬಂಧಿಸಿದಂತೆ ದೂರು ನೀಡಿ ಮೂರು ತಿಂಗಳಾದರೂ ರಾಜ್ಯಪಾಲರು ಕ್ರಮ ಕೈಗೊಂಡಿರಲಿಲ್ಲ. ಹಿಂದೆ ಬಿಜೆಪಿಯವರ ವಿರುದ್ದ ಖಾಸಗಿ ದೂರು ದಾಖಲಾದಾಗ ಪ್ರಾಸಿಕ್ಯುಷನ್‌ಗೂ ಅನುಮತಿ ನೀಡಿಲ್ಲ, ಶೋಕಾಸ್ ನೊಟೀಸ್ ಕೂಡ ನೀಡಿರಲಿಲ್ಲ. ಈ ಹಿಂದೆ ಬಿಜೆಪಿ ನಾಯಕರ ವಿರುದ್ದ ಅನೇಕ ದೂರುಗಳು ಸಲ್ಲಿಕೆಯಾಗಿದ್ದು, ಆ ದೂರುಗಳ ಬಗ್ಗೆ ರಾಜ್ಯಪಾಲರು ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ಈಗ ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಒತ್ತಡ ಹೇರುತ್ತಿರುವುದು ಸರಿಯಲ್ಲ ಎಂದು ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ.

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ತರಾತುರಿಯಲ್ಲಿ ನೋಟೀಸ್ ನೀಡಿದ್ದಾರೆ. ಇದು ರಾಜಕೀಯ ಪ್ರೇರಿತವಾಗಿರುವುದರಿಂದ ಈ ನೊಟೀಸ್​ ಹಿಂಪಡೆಯುವಂತೆ ರಾಜ್ಯಪಾಲರನ್ನು ಒತ್ತಾಯಿಸಲು ಸಚಿವ ಸಂಪುಟ ನಿರ್ಧಾರಿಸಿದೆ.

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ರಾಜಣ್ಣ, 20 ವರ್ಷಗಳ ಹಿಂದೆಯೇ ಸಿಎಂ ಪತ್ನಿ ಕಾನೂನು ಪ್ರಕಾರವಾಗಿಯೇ ಮುಡಾ ಸೈಟ್​​ ಪಡೆದುಕೊಂಡಿದ್ದಾರೆ.ಯ ಹೀಗಿದ್ದರೂ ರಾಜಕೀಯ ಪ್ರೇರಿತವಾಗಿ ವಿವಾದ ಎಬ್ಬಿಸಲಾಗಿದೆ ಎಂದರು. ಈಗ ಗವರ್ನರ್ ಗೆಹ್ಲೋಟ್​ ಮುಂದೆ‌ ಎಷ್ಟು ಅರ್ಜಿಗಳು ಇವೆ?. ಇದು ರಾಜಕೀಯ ಪ್ರೇರಿತ ಹಾಗಾಗಿ ಸಂಪುಟ ಸಭೆಯಲ್ಲಿ ರಾಜ್ಯಪಾಲರ ನೊಟೀಸ್ ಹಿಂಪಡೆಯಲು ಒತ್ತಾಯಿಸುವ ತೀರ್ಮಾನಿಸಲಾಯಿತು ಎಂದು ತಿಳಿಸಿದರು.