Saturday, December 6

ಸಿದ್ದರಾಮಯ್ಯ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು; ವಿಜಯೇಂದ್ರ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಇದೀಗ ರಾಜಕೀಯ ವಿದ್ಯಮಾನಗಳ ಕೇಂದ್ರಬಿಂದುವಾಗಿದೆ. ಖರ್ಗೆಯವರನ್ನು ಕಾಂಗ್ರೆಸ್ ನಾಯಕರು ಭೇಟಿಯಾಗಿ ಮಾತಿಕತೆ ನಡೆಸಿದ್ದಾರೆಂಬ ಬೆಳವಣಿಗೆಯ ಬೆನ್ನಲ್ಲೇ ಡಿ.ಕೆ. ಸುರೇಶ್ ಸೇರಿದಂತೆ ಹಲವು ರಾಜಕೀಯ ನಾಯಕರು ಸೋಮವಾರ ಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿನ ಈ ಬೆಳವಣಿಗೆಯ ನಡುವೆಯೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡಾ ಸತೀಶ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಪಕ್ಷದೊಳಗಿನ ಬೆಳವಣಿಗೆಯನ್ನು ಗಮನಿಸಿದರೆ ಸಿದ್ದರಾಮಯ್ಯ ಸರ್ಕಾರವು ಯಾವುದೇ ಕ್ಷಣದಲ್ಲೂ ಬೀಳಬಹುದು ಎಂದು ವಿಶ್ಲೇಷಿಸಿದರು.

ಸತೀಶ್ ಜಾರಕಿಹೊಳಿ ಜೊತೆ ತಾವು ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ ಎಂದ ವಿಜಯೇಂದ್ರ, ‘ನಮ್ಮ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗ್ಗೆ ಚರ್ಚಿಸಲು ಮುಖಂಡರೊಂದಿಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾಗಿ ತಿಳಿಸಿದರು. ಶಿಕಾರಿಪುರದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ನಂ-57 ಶಿವಮೊಗ್ಗ- ಶಿಕಾರಿಪುರ -ಹಾನಗಲ್ -ತಡಸ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿರುವ ಕುಟ್ರಳ್ಳಿ ಸುಂಕ ವಸೂಲಾತಿ ಕೇಂದ್ರದಿಂದ ನಮ್ಮ ರೈತರು ಹಾಗೂ ಸಾರ್ವಜನಿಕರಿಗೆ ತೊಂದರೆಗಳಾಗುತ್ತಿದ್ದು ಶೀಘ್ರ ಟೋಲ್ ತೆರವುಗೊಳಿಸುವಂತೆ ಮನವಿ ಮಾಡಲಾಯಿತು ಎಂದು ಅವರು ಮಾಹಿತಿ ಹಂಚಿಕೊಂಡರು. ಸದ್ಯದಲ್ಲೇ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದವರು ತಿಳಿಸಿದರು.