ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣ; ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆಗೆ ಅಶೋಕ್ ಆಗ್ರಹ

ಬೆಂಗಳೂರು: ಹಿಂದೆ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದ್ದ ಸಿದ್ದರಾಮಯ್ಯ, ಇದೀಗ ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತ ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣ ಬಗ್ಗೆ ಪ್ರತಿಕ್ರಿಯಿಸದ್ದಾರೆ. ಬೆಳಗಾವಿಯ ಸರ್ಕಾರಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೊಬೈಲ್‌ನಲ್ಲಿ ಸಂದೇಶ ಕಳುಹಿಸಿದ್ದರು. ಆದರೂ ಹಿರಿಯ ಅಧಿಕಾರಿಗಳು ಇದನ್ನು ಕಡೆಗಣಿಸಿದ್ದಾರೆ ಎಂದು ದೂರಿದರು.

ಇದು ಕರುಣೆಯೇ ಇಲ್ಲದ ಸರ್ಕಾರ. ಸುಮಾರು 2 ಲಕ್ಷ ರೂ. ಲಂಚವನ್ನು ರುದ್ರಣ್ಣ ಅವರಿಂದ ಪಡೆಯಲಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಪತ್ರ ಬರೆದ ಮಾದರಿಯಲ್ಲೇ ರುದ್ರಣ್ಣ ಕೂಡ ಭ್ರಷ್ಟಾಚಾರದ ವಿರುದ್ಧ ಹೋರಾಡಿ ಎಂದು ಸಂದೇಶ ಕಳುಹಿಸಿದ್ದಾರೆ. ಪಿಎಸ್‌ಐ ಪರಶುರಾಮ್‌ ಸತ್ತ ಬಳಿಕ ಯಾರನ್ನೂ ಬಂಧನ ಮಾಡಿಲ್ಲ. ರುದ್ರಣ್ಣ ಅವರ ಪ್ರಕರಣ ಅದೇ ರೀತಿ ಆಗುವ ಸಂಭವವಿದೆ. ಮಾಜಿ ಸಚಿವ ಈಶ್ವರಪ್ಪ ಅವರ ವಿರುದ್ಧ ತೊಡೆ ತಟ್ಟಿ ಹೋರಾಡಿದ್ದ ಸಿಎಂ ಸಿದ್ದರಾಮಯ್ಯ, ಈಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಆಗ್ರಹಿಸಿದರು.