Monday, August 17

ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಅಂಜುಂ ಪರ್ವೇಜ್ ನಿಯುಕ್ತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ಅವರನ್ನು ಸರ್ಕಾರ ನಿಯುಕ್ತಿಗೊಳಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಅಂಜುಂ ಪರ್ವೇಜ್ ಅವರು ಇನ್ನು ಮುಂದೆಯೂ ಈ ಇಲಾಖೆಯ ಹೆಚ್ಚುವರಿ ಹೊಣೆ ನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಂಜುಮ್ ಪರ್ವೇಜ್ ಅವರು 1994ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ. ನಗರ ಮತ್ತು ಗ್ರಾಮೀಣಾಭಿವೃದ್ಧಿ, ನೀರು ಸರಬರಾಜು ಮತ್ತು ಸಾರಿಗೆ ಕ್ಷೇತ್ರಗಳಲ್ಲಿ ಸುಧಾರಣೆಗೆ ಹೆಸರಾಗಿದ್ದಾರೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.