Thursday, January 29

ಬೀದರ್: ಭೀಕರ ಅಪಘಾತ: ತೆಲಂಗಾಣ ಮೂಲದ ಮೂವರು ಸಾವು

ಬೀದರ್: ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಾರು ಮತ್ತು ಕೊರಿಯರ್‌ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಘಟನೆ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಮೃತರನ್ನು ರಾಜಪ್ಪ, ನವೀನ್ ಮತ್ತು ನಾಗರಾಜ್ ಎಂದು ಗುರುತಿಸಲಾಗಿದೆ. ಇವರಲ್ಲಿ ನಾಗರಾಜ್ ನಾರಾಯಣ ಖೇಡ್‌ನ ಪಿಯುಸಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು ಎಂದು ತಿಳಿದುಬಂದಿದೆ.

ಮೃತರು ತೆಲಂಗಾಣ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ತೆಲಂಗಾಣದಿಂದ ಕಲಬುರಗಿಯ ಗಾಣಗಾಪುರದ ದತ್ತಾತ್ರೇಯ ದೇಗುಲಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಧನ್ನೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಧನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.