Friday, May 1

ಎಂ.ಸತ್ಯವರ ಬಳಿ ಬೈಕ್,ಕ್ಯಾಂಟರ್, ಎಕ್ಸ್‌ಯುವಿ ಕಾರಿನ ನಡುವೆ ಅಪಘಾತ: ಏಳು ಮಂದಿ ದುರ್ಮರಣ

ಬೆಂಗಳೂರು: ಬೆಂಗಳೂರು ಹೊರವಲಯದ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಸಮೀಪ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ.

ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್‌ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೈಕ್‌ಗೆ ಎಕ್ಸ್‌ಯುವಿ ಕಾರು ಮೊದಲು ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಗುದ್ದಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮೃತರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ನಿವಾಸಿಗಳೆಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.