Saturday, April 11

ಯೂತ್ ಕಾಂಗ್ರೆಸ್ ನಾಯಕ ಫೈರೋಜ್ ಪಠಾಣ್ ಹತ್ಯೆ

ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಮುಗಿದಿದ್ದು,ರಾಜಕೀಯ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಇದ್ದಾರೆ. ರಾಜ್ಯದ ಜನರು ಕೂಡಾ ಕುತೂಹಲದಿಂದ ಫಲಿತಾಂಶವನ್ನು ಎದುರು ನೋಡುತ್ತಿದ್ದಾರೆ. ಆದರೆ, ಅಷ್ಟರಲ್ಲೇ, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆಯ ಸುದ್ದಿ ರಾಜ್ಯದ ಜನರನ್ನು ಬೆಚ್ಚಿ ಬೆಳಿಸಿದೆ.

ಧಾರವಾಡ: ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಶುಕ್ರವಾರ ರಾತ್ರಿ ನಗರದ ಹಾಶ್ಮಿ ನಗರದಲ್ಲಿರುವ ಮನೆಗೆ ನುಗ್ಗಿದ ಆರು ಜನರ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಉಪನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಸಂಚು ರೂಪಿಸಿದ್ದ ಆರೋಪದಲ್ಲಿ ಅರ್ಬಾಜ್ ಪಠಾಣ್ ಮತ್ತು ಗುಲಾಬ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ವರು ಪ್ರಮುಖ ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಉಪನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.