Wednesday, May 27

ಶುಕ್ರವಾರ ಸಿದ್ದರಾಮಯ್ಯ ರಾಜೀನಾಮೆ?: ವೇಣುಗೋಪಾಲ್, ಸುರ್ಜೇವಾಲಾ ರಾಜ್ಯಕ್ಕೆ ದೌಡು

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಚಟುವಟಿಕೆ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಲಯದಲ್ಲಿ ಬೆಳವಣಿಗೆಗಳು ಚುರುಕುಗೊಂಡಿವೆ.

ಮೇ 28ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವ ಬಗ್ಗೆ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಅದಕ್ಕೂ ಮುನ್ನ ಗುರುವಾರ ಸಚಿವ ಸಂಪುಟ ಸಭೆ ನಡೆಯಲಿದೆ.

ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪರವಾಗಿ ಒಲವು ತೋರಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್‌ಗೆ 134 ಶಾಸಕರ ಬಲವಿದ್ದು, ತಮ್ಮ ಪರವಾಗಿ 100ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ ಎಂಬ ಪತ್ರವನ್ನು ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಮಂಡಿಸಿದ್ದರು. ಆದರೂ ಹೊಸ ನಾಯಕತ್ವದ ಬಗ್ಗೆ ಗಂಭೀರ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.

ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾದ ಬಳಿಕ ಬೆಂಗಳೂರಿಗೆ ಮರಳಿದ ಸಿದ್ದರಾಮಯ್ಯ, ಸಿಎಂ ನಿವಾಸ ‘ಕಾವೇರಿ’ಯಲ್ಲಿ ಆಪ್ತ ಸಚಿವರೊಂದಿಗೆ ಮಧ್ಯರಾತ್ರಿ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದೆಡೆ, ಕೆ. ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸಿ ಮುಂದಿನ ಬೆಳವಣಿಗೆಗಳ ಮೇಲ್ವಿಚಾರಣೆ ನಡೆಸಲಿದ್ದಾರೆ. ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವ ಸಾಧ್ಯತೆಯೂ ಇದೆ.

ಪ್ರಸ್ತುತ ರಾಜಕೀಯ ಲೆಕ್ಕಾಚಾರಗಳ ಪ್ರಕಾರ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಮೊದಲ ಆಯ್ಕೆಯಾಗಿದ್ದಾರೆ. ಆದರೆ 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ಹೊಸ ನಾಯಕತ್ವಕ್ಕೆ ಅವಕಾಶ ನೀಡುವ ಆಯ್ಕೆಯನ್ನೂ ಕಾಂಗ್ರೆಸ್ ಹೈಕಮಾಂಡ್ ಪರಿಗಣಿಸುತ್ತಿದೆ ಎನ್ನಲಾಗಿದೆ.

ಈ ಪೈಕಿ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಜಿ. ಪರಮೇಶ್ವರ್ ಅವರ ಹೆಸರುಗಳೂ ಪ್ರಮುಖವಾಗಿ ಕೇಳಿಬರುತ್ತಿವೆ.