Thursday, October 1

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹವಾಮಾನ ಮುನ್ಸೂಚನೆ ನೀಡಿದೆ. ಕೆಲವೆಡೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲವೆಡೆ ಸಾಧಾರಣ ಮಳೆ ಹಾಗೂ ಗುಡುಗು, ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 1ರಂದು ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ X ನಲ್ಲಿ ತಿಳಿಸಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಸಹಿತ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.