2027ಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರು; ಡಿಕೆಶಿ
ಚಿಕ್ಕಬಳ್ಳಾಪುರ: 2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2027ಕ್ಕೆ ಜಿಲ್ಲೆಗೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲಾಗುತ್ತದೆ ಎಂದೂ ಅವರು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ಆಯೋಜಿಸಿದ್ದ, ಚಿಕ್ಕಬಳ್ಳಾಪುರ ಹೈಟೆಕ್ ಗೂಡಿನ ಮಾರುಕಟ್ಟೆ, ಹೆಚ್.ಎನ್ ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಡಿಕೆಶಿ ಮಾತನಾಡಿದರು. ರಾಜ್ಯದಲ್ಲಿ ಅಭಿವೃದ್ಧಿಯ ಸಂಗಮವಾಗಿದೆ. 2 ಸಾವಿರ ಕೋಟಿ ರೂ. ಮೊತ್ತದ ಅಭಿವೃದ್ಧಿ ಕೆಲಸವನ್ನು ವಿರೋಧ ಪಕ್ಷದ ಶಾಸಕರ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರೆ ನಮ್ಮ ಜನಪರ ಧೋರಣೆಯನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಈ ಕ್ಷೇತ್ರದ ಅಭಿವೃದ್ಧಿಗೆ ಇಡೀ ಸರ್ಕಾರವೇ ಬಂದಿದೆ ಎಂದರೆ ನಮಗೆ ಜನರ ಮೇಲಿನ ಪ್ರೀತಿಯೇ ಕಾರಣವಾಗಿದೆ ಎಂದರು.
...









