
ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ
ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಸುದ್ದಿಗಾರರಿಗೆ ಮಾಹಿತಿ ಒದಗಿಸಿದ ಡಿಕೆಶಿ, "ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೆ" ಎಂದು ತಿಳಿಸಿದರು."ಈ ಯೋಜನೆಗಳ ವಿಚಾರವಾಗಿ ಅನೇಕ ಟೀಕೆಗಳು ಬರುತ್ತಿದ್ದವು. ಟೀಕೆಗಳು ಬರಲಿ. ಈ ಯೋಜನೆಯಲ್ಲಿ ನೀರನ್ನು ಪಂಪ್ ಮಾಡುವ ಮೂಲಕ ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ...








