Tuesday, July 14

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡಲು ದೇವೇಗೌಡ ಆಗ್ರಹ, ವಿಧಾನಸೌಧ ಎದುರು ಸತ್ಯಾಗ್ರಹದ ಎಚ್ಚರಿಕೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ ತೀವ್ರಗೊಂಡಿರುವ ಬೆನ್ನಲ್ಲೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಯೋಜನೆಯನ್ನು ತಕ್ಷಣ ಕೈಬಿಡುವಂತೆ ಆಗ್ರಹಿಸಿದ್ದಾರೆ. ಸರ್ಕಾರ ಮನವಿಯನ್ನು ಕಡೆಗಣಿಸಿದರೆ ರೈತರ ಪರವಾಗಿ ಜೆಡಿಎಸ್ ಹೋರಾಟ ನಡೆಸುವುದರ ಜೊತೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ರಾಮನಗರ ಮತ್ತು ಹಾರೋಹಳ್ಳಿ ಭಾಗದ 7,481 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ₹18,133 ಕೋಟಿ ವೆಚ್ಚದಲ್ಲಿ ಸಮಗ್ರ ಉಪನಗರ ಯೋಜನೆ ಜಾರಿಗೆ ಮುಂದಾಗಿದೆ. ಆದರೆ ಈ ಪ್ರದೇಶದಲ್ಲಿ ಈಗಾಗಲೇ ಸಾವಿರಾರು ಎಕರೆ ಭೂಮಿಯನ್ನು ಕೈಗಾರಿಕೆಗಳಿಗೆ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ದೇವೇಗೌಡರು ಹೇಳಿದ್ದಾರೆ.

ಯೋಜನೆಯಿಂದ 10,580 ರೈತರು ಬಾಧಿತರಾಗಲಿದ್ದು, ಅವರಲ್ಲಿ ಶೇ.82ರಷ್ಟು ಮಂದಿ ಒಂದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಸಣ್ಣ ರೈತರು ಎಂದು ಅವರು ಉಲ್ಲೇಖಿಸಿದ್ದಾರೆ.

ಭೈರಮಂಗಲ ಕೆರೆ ಈಗಾಗಲೇ ಕೈಗಾರಿಕಾ ತ್ಯಾಜ್ಯ ಮತ್ತು ಮಾಲಿನ್ಯದಿಂದ ಹಾನಿಗೊಳಗಾಗಿದ್ದು, ಅದರ ಪುನರುಜ್ಜೀವನ ಕಾಮಗಾರಿಯೂ ಪೂರ್ಣಗೊಂಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕೆರೆಯ ಸಮೀಪ ದೊಡ್ಡ ಉಪನಗರ ಯೋಜನೆ ಜಾರಿಗೊಳಿಸುವುದು ಪರಿಸರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸೂಕ್ತವಲ್ಲ ಎಂದು ದೇವೇಗೌಡರು ಅಭಿಪ್ರಾಯಪಟ್ಟಿದ್ದಾರೆ.

ಏಳು ದಶಕಗಳ ಸಾರ್ವಜನಿಕ ಜೀವನದಲ್ಲಿ ರೈತರ ಹಿತಕ್ಕಾಗಿ ಕೆಲಸ ಮಾಡಿರುವುದಾಗಿ ಉಲ್ಲೇಖಿಸಿರುವ ಅವರು, ಸರ್ಕಾರ ಯೋಜನೆಯನ್ನು ಹಿಂತೆಗೆದುಕೊಳ್ಳದಿದ್ದರೆ ರೈತರ ಹೋರಾಟಕ್ಕೆ ಬೆಂಬಲ ನೀಡಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಸತ್ಯಾಗ್ರಹ ಆರಂಭಿಸುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.