
ರಾಮನಗರ: ಕಾಂಗ್ರೆಸ್ ಸರ್ಕಾರದ ಉದ್ದೇಶಿತ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಹಾಗೂ ಬಿಜೆಪಿ ವತಿಯಿಂದ ಮೂರು ದಿನಗಳ ಪಾದಯಾತ್ರೆಗೆ ಭಾನುವಾರ ಚಾಲನೆ ನೀಡಲಾಯಿತು. ರಾಮನಗರ ತಾಲ್ಲೂಕಿನ ಬೈರಮಂಗಲ ಗ್ರಾಮದಿಂದ ಆರಂಭವಾದ ಪಾದಯಾತ್ರೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕ ಆರ್.ಅಶೋಕ್ ಚಾಲನೆ ನೀಡಿದರು.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯೊಂದಿಗೆ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಸುಮಾರು 38 ಕಿ.ಮೀ. ಸಾಗಲಿದೆ. ಮೈತ್ರಿ ಪಕ್ಷವಾದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪಾದಯಾತ್ರೆಗೆ ಬೆಂಬಲ ನೀಡಿದ್ದಾರೆ.

ಬಿಡದಿ ಟೌನ್‌ಶಿಪ್ ಯೋಜನೆ ರದ್ದುಗೊಳಿಸಿ ರೈತರ ಭೂಮಿಯನ್ನು ಉಳಿಸಬೇಕು ಎಂಬುದು ಜೆಡಿಎಸ್‌ನ ಪ್ರಮುಖ ಆಗ್ರಹವಾಗಿದೆ. ಪಾದಯಾತ್ರೆ ಆರಂಭಕ್ಕೂ ಮುನ್ನ ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ರೈತರ ಹಿತಕ್ಕಾಗಿ ನಡೆಯುತ್ತಿರುವ ಹೋರಾಟದಲ್ಲಿ ದೃಢವಾಗಿ ನಿಲ್ಲುವಂತೆ ದೇವೇಗೌಡರು ನಿಖಿಲ್‌ಗೆ ಶುಭ ಹಾರೈಸಿದರು.
ಇದೇ ವೇಳೆ ಪಾದಯಾತ್ರೆ ಯಶಸ್ವಿಯಾಗಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ.ರೇವಣ್ಣ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್ ಯೋಜನೆಗೆ ಮರುಜೀವ ನೀಡಲಾಗುತ್ತಿದ್ದು, ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಕ್ರೀಡಾಂಗಣ, ಉದ್ಯಾನಗಳು ಹಾಗೂ ಸುಸಜ್ಜಿತ ವಸತಿ ವ್ಯವಸ್ಥೆಯೊಂದಿಗೆ ಆಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸುವ ಉದ್ದೇಶವಿದೆ ಎಂದು ಹೇಳಿದ್ದಾರೆ.
ರೈತರ ಹಿತಾಸಕ್ತಿ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಹಿಂದಿನ ಸರ್ಕಾರ ನಿಗದಿಪಡಿಸಿದ್ದ ಎಕರೆಗೆ ₹25 ಲಕ್ಷಕ್ಕೆ ಹೋಲಿಸಿದರೆ ಪ್ರಸ್ತುತ ಎಕರೆಗೆ ₹3 ಕೋಟಿಗೂ ಹೆಚ್ಚು ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ. ಹಣದ ಬದಲಾಗಿ ಭೂಮಿ ಬಯಸುವ ರೈತರಿಗೆ ಶೇ.50ರಷ್ಟು ಅಭಿವೃದ್ಧಿಪಡಿಸಿದ ಜಾಗ ನೀಡಲಾಗುವುದು. ಭೂಸ್ವಾಧೀನ ಪ್ರಕ್ರಿಯೆ ಐಚ್ಛಿಕವಾಗಿದ್ದು, ಯಾವುದೇ ರೈತರ ಮೇಲೆ ಒತ್ತಡ ಹೇರಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
