
ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪದ ನಡುವೆಯೇ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರೆಂಬ ಸುದ್ದಿ ಕುತೂಹಲ ಕೆರಳಿಸಿದೆ.
ಕಮಿಷನ್ ವಸೂಲಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರಿಂದ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.
ಸುಮಾರು ₹15 ಕೋಟಿ ವೆಚ್ಚದಲ್ಲಿ ಜಾರಿಗೊಂಡ ಭೂಒಡೆತನ ಯೋಜನೆಯಡಿ 60 ಎಕರೆ ಭೂಮಿ ಖರೀದಿ ಮಾಡಿ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಪ್ರಕ್ರಿಯೆಯಲ್ಲಿ, ಶೇಕಡ 60ರಷ್ಟು ಕಮಿಷನ್ ವಸೂಲಿ ಮಾಡಲಾಗಿದೆ ಎಂಬ ಗಂಭೀರ ಆರೋಪ ಹೊರಬಿದ್ದಿತ್ತು. ಈ ಸಂಬಂಧಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ವಿಷಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದರೆ, ರವಿಕುಮಾರ್ ಅವರು ಆರೋಪಗಳನ್ನು ತಳ್ಳಿಹಾಕಿದ್ದರು. ಆದಾಗ್ಯೂ ಪಕ್ಷಕ್ಕೆ ಮುಜುಗರ ಉಂಟಾಗದಂತೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.