Friday, June 5

ಖಾತೆ ಹಂಚಿಕೆ ಕಿಚ್ಚು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿವಾದ ಭುಗಿಲೆದ್ದಿದ್ದು, ಅಸಮಾಧಾನಗೊಂಡಿರುವ ಸಚಿವ ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ತಮಗೆ ನಿರೀಕ್ಷಿತ ಖಾತೆ ನೀಡದಿರುವುದರಿಂದ ತೀವ್ರ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ, ಶುಕ್ರವಾರ ತುರ್ತು ಸುದ್ದಿಗೋಷ್ಠಿ ನಡೆಸಿ ತಮ್ಮ ನಿರ್ಧಾರವನ್ನು ಬಹಿರಂಗಪಡಿಸಿದರು. “ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು.

ಖಾತೆ ಹಂಚಿಕೆ ಕುರಿತಂತೆ ಅವರು ಗುರುವಾರವೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ಆದರೂ ಸರ್ಕಾರ ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿಯನ್ನು ಅವರಿಗೆ ನೀಡಿತ್ತು.

ತಮಗೆ ಬೇಕಿದ್ದ ಖಾತೆ ಸಿಗದ ಹಿನ್ನೆಲೆಯಲ್ಲಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಇದೀಗ ಅವರ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಹೊರಬಿದ್ದಿರುವುದು ಸರ್ಕಾರಕ್ಕೆ ಮೊದಲ ದೊಡ್ಡ ರಾಜಕೀಯ ಸವಾಲಾಗಿ ಪರಿಣಮಿಸಿದೆ. ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಕುರಿತು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.