
ನವದೆಹಲಿ: ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಲು ತಮಿಳುನಾಡು ಸರ್ಕಾರ ಕೈಗೊಂಡಿದ್ದ ನಿರ್ಧಾರವನ್ನು ರದ್ದುಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.
2025ರ ಸೆಪ್ಟೆಂಬರ್ 27ರಂದು ಕರೂರ್ನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 41 ಮಂದಿ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಮೃತಪಟ್ಟವರ 31 ಕುಟುಂಬಸ್ಥರಿಗೆ ಜುಲೈ 10ರಂದು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇಮಕಾತಿ ಆದೇಶಗಳನ್ನು ವಿತರಿಸಿದ್ದರು.
ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರ ವಿಭಾಗೀಯ ಪೀಠ, ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದೆ.

ವಿಚಾರಣೆ ವೇಳೆ ಸರ್ಕಾರದ ನೀತಿಯನ್ನು ಪ್ರಶ್ನಿಸಿದ್ದ ಅರ್ಜಿದಾರರ ನಿಲುವನ್ನು ಪ್ರಶ್ನಿಸಿದ ನ್ಯಾಯಪೀಠ, ದುರಂತದಲ್ಲಿ ಕುಟುಂಬದ ಏಕೈಕ ಸದಸ್ಯ ಮೃತಪಟ್ಟಿದ್ದರೆ, ಸರ್ಕಾರ ಅವರ ಮಗ ಅಥವಾ ಮಗಳಿಗೆ ಉದ್ಯೋಗ ನೀಡಬಾರದೇ? ಎಂದು ಪ್ರಶ್ನಿಸಿತು.
ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಪಟ್ಟವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಮಧ್ಯಂತರ ಆದೇಶ ನೀಡಿದ್ದು, ಇದರಿಂದ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡುವ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ಸದ್ಯ ಕಾನೂನು ರಕ್ಷಣೆ ದೊರೆತಂತಾಗಿದೆ.
